ಪಾಲಕರ ಆರೋಗ್ಯದ ಕಾಳಜಿಗೆ ‘ಸ್ವಾಸ್ಥ್ಯ ಸಂವಾದ’

ಹಂಚಿಕೊಳ್ಳಿ

ಧಾರವಾಡ
ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಸೆಂಟ್ರಲ್ ಶಾಲೆಯಲ್ಲಿ ಪಾಲಕರ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕಾಳಜಿಯೊಂದಿಗೆ ವಿನೂತನವಾಗಿ ‘ಸ್ವಾಸ್ಥ್ಯ ಸಂವಾದ’ ಕಾರ್ಯಕ್ರಮ ಶನಿವಾರ ಯಶಸ್ವಿಯಾಗಿ ನಡೆಯಿತು.

ಹುಬ್ಬಳ್ಳಿ-ಧಾರವಾಡದಲ್ಲಿಯೇ ಮೊದಲ ಬಾರಿಗೆ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಎಸ್‌ಡಿಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಎಂ.ಎಂ. ಜೋಶಿ ಆಸ್ಪತ್ರೆಯ ಸಹಯೋಗದೊಂದಿಗೆ ಪಾಲಕರಿಗೆ ರಕ್ತದೊತ್ತಡ (ಬಿ.ಪಿ.), ರಕ್ತದಲ್ಲಿನ ಸಕ್ಕರೆ ಪ್ರಮಾಣ (ಬ್ಲಡ್ ಶುಗರ್) ಹಾಗೂ ಕಣ್ಣಿನ ತಪಾಸಣೆ ನಡೆಸಲಾಯಿತು. ಎರಡು ಸಾವಿರಕ್ಕೂ ಹೆಚ್ಚು ಪಾಲಕರು ಆರೋಗ್ಯ ತಪಾಸಣೆಯ ಪ್ರಯೋಜನ ಪಡೆದುಕೊಂಡರು.

ಇದೇ ಸಂದರ್ಭದಲ್ಲಿ ಸುಕೃತಿ ಎನ್‌ಜಿಒ ವತಿಯಿಂದ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಮಾರಾಟಕ್ಕಾಗಿ ದೀಪಾವಳಿ ಮಳಿಗೆಗಳನ್ನು ಸ್ಥಾಪಿಸಲು ಶಾಲೆಯು ಅವಕಾಶ ಕಲ್ಪಿಸಿಕೊಟ್ಟಿತು. ಆ ಮೂಲಕ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೂ ಪ್ರೋತ್ಸಾಹ ನೀಡಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಜೆಎಸ್‌ಎಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ ಮಾತನಾಡಿ, ಸಮಾಜದ ಹಿತಕ್ಕಾಗಿ ನಮ್ಮ ಕಾರ್ಯಗಳು ಸದಾ ನಡೆಯಬೇಕು. ಶಿಕ್ಷಣದ ಜೊತೆಗೆ ಪಾಲಕರ ಆರೋಗ್ಯದ ಕಾಳಜಿ ವಹಿಸುವುದು ಹಾಗೂ ಸ್ವಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಕಲ್ಪಿಸಿರುವುದು ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಜೆಎಸ್‌ಎಸ್ ಆಡಳಿತಾಧಿಕಾರಿ ಅರಿಹಂತ ಪ್ರಸಾದ, ಐಟಿಐ ಕಾಲೇಜಿನ ಪ್ರಾಚಾರ್ಯ ಮಹಾವೀರ ಉಪಾಧ್ಯೆ, ಸುಕೃತಿ ಎನ್‌ಜಿಒ ಮುಖ್ಯಸ್ಥರು, ಎಸ್‌ಡಿಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಎಂ.ಎಂ. ಜೋಶಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ, ಶಾಲೆಯ ಶಿಕ್ಷಕ ವೃಂದ ಹಾಗೂ ಪಾಲಕರು ಉಪಸ್ಥಿತರಿದ್ದರು.

ಶಾಲೆಯ ಪ್ರಾಚಾರ್ಯೆ ರಜನಿ ಪಾಟೀಲ ಸ್ವಾಗತಿಸಿ, ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿದರು. ವಾಣಿಶ್ರೀ ಕೋಳಿವಾಡ ನಿರೂಪಿಸಿದರು. ಕಾರ್ಯಕ್ರಮದ ಕುರಿತು ಪಾಲಕರು ಮೆಚ್ಚುಗೆ ವ್ಯಕ್ತಪಡಿಸಿದರು.


ಹಂಚಿಕೊಳ್ಳಿ

Leave a Reply

Your email address will not be published. Required fields are marked *