ಪ್ರಜಾಪ್ರಭುತ್ವ ಕಾಪಾಡುವುದು ನಮ್ಮೆಲ್ಲರ ಹೊಣೆ: ಡಾ. ಅಜಿತ್‌ಪ್ರಸಾದ್

ಹಂಚಿಕೊಳ್ಳಿ

ಧಾರವಾಡ
ಪ್ರಜಾಪ್ರಭುತ್ವದ ಬಲವರ್ಧನೆಗೆ ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನ ಹಕ್ಕು ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಧಾರವಾಡದಲ್ಲಿ ಜಾಗೃತಿ ಜಾಥಾ ನಡೆಯಿತು.


ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ, ಜೆಎಸ್‌ಎಸ್ ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಮಹಾವಿದ್ಯಾಲಯ, ಮಹಾನಗರ ಪಾಲಿಕೆ, ಜೆಎಸ್‌ಎಸ್‌ನ ಎನ್‌ಎಸ್‌ಎಸ್, ಎನ್‌ಸಿಸಿ ಹಾಗೂ ರಾಜ್ಯಶಾಸ್ತ್ರ ವಿಭಾಗ ಮತ್ತು SVEEP ಸಹಯೋಗದಲ್ಲಿ ಜಾಥಾ ಆಯೋಜಿಸಲಾಗಿತ್ತು.


ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಡಾ. ಅಜಿತ್‌ಪ್ರಸಾದ್ ಹಾಗೂ ಆಡಳಿತಾಧಿಕಾರಿ ಶ್ರೀ ಅರಿಹಂತ ಪ್ರಸಾದ್ ಅವರು ಜಾಥಾಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ಅಜಿತ್‌ಪ್ರಸಾದ್, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಭಾರತೀಯ ನಾಗರಿಕರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಬೇಕು. ಈಗಾಗಲೇ ಹೆಸರು ಇದ್ದಲ್ಲಿ ಅದು ಸರಿಯಾಗಿದೆಯೇ ಎಂಬುದನ್ನು ಪರಿಶೀಲಿಸಿಕೊಂಡು, ಪ್ರಜಾಪ್ರಭುತ್ವದ ಹಕ್ಕನ್ನು ಸಮರ್ಥವಾಗಿ ಬಳಸಬೇಕು ಎಂದು ಕರೆ ನೀಡಿದರು.


ಜಾಥಾವು ಧಾರವಾಡದ ಲಕ್ಷ್ಮೀನಗರ, ಜನ್ನತ್‌ನಗರ ಹಾಗೂ ಮನಕಿಲ್ಲಾ ಆಸ್ಪತ್ರೆ ಮಾರ್ಗವಾಗಿ ಸಂಚರಿಸಿ ಸಾರ್ವಜನಿಕರಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಾಗೃತಿ ಮೂಡಿಸಿತು.
ಕಾರ್ಯಕ್ರಮದಲ್ಲಿ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಸಂಸ್ಥೆಯ ಉಪಪ್ರಾಚಾರ್ಯ ಡಾ. ಸೂರಜ್ ಜೈನ್, ಜೆಎಸ್‌ಎಸ್ ಐಟಿಐ ಕಾಲೇಜಿನ ಪ್ರಾಚಾರ್ಯ ಮಹಾವೀರ ಉಪಾಧ್ಯೆ, ಜೆಎಸ್‌ಎಸ್ ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಕಾಲೇಜಿನ ಪ್ರಾಚಾರ್ಯ ಪ್ರೊ. ವೆಂಕಟೇಶ ಮುತಾಲಿಕ್ ಸೇರಿದಂತೆ ಹಲವು ಗಣ್ಯರು, ಸಿಬ್ಬಂದಿ ಹಾಗೂ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.


ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ, ವಿವರಗಳ ಪರಿಶೀಲನೆ ಹಾಗೂ ಪ್ರಜಾಪ್ರಭುತ್ವದ ಮಹತ್ವದ ಕುರಿತು ಜಾಥಾದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.


ಹಂಚಿಕೊಳ್ಳಿ

Leave a Reply

Your email address will not be published. Required fields are marked *