ಧಾರವಾಡ
ರಾಜ್ಯ ಸರ್ಕಾರದ ಆರ್ಥಿಕ ನೀತಿಗಳು ಹಾಗೂ ರಾಜ್ಯದ ಹಣಕಾಸು ನಿರ್ವಹಣೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯ ಹುಬ್ಬಳ್ಳಿ–ಧಾರವಾಡ ಮಹಾನಗರ ಹಾಗೂ ಧಾರವಾಡ ಗ್ರಾಮಾಂತರ ಜಿಲ್ಲಾ ಘಟಕಗಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನುದ್ದೇಶಿಸಿ ಬಿಜೆಪಿ ಮುಖಂಡ ಜಯತೀರ್ಥ ಕಟ್ಟಿ ಮಾತನಾಡಿ, “ರಾಜ್ಯದ ಹಣಕಾಸು ಪರಿಸ್ಥಿತಿ ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಸರ್ಕಾರ ಜನರಿಗೆ ಸ್ಪಷ್ಟವಾದ ಮಾಹಿತಿ ನೀಡಬೇಕು. ರಾಜ್ಯದ ಅಭಿವೃದ್ಧಿಗೆ ಅಗತ್ಯವಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿ, ಜನರ ಮೂಲಭೂತ ಅಗತ್ಯಗಳಿಗೆ ಆದ್ಯತೆ ನೀಡಬೇಕು” ಎಂದು ಒತ್ತಾಯಿಸಿದರು.
ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ ಮಾತನಾಡಿ, “ರಾಜ್ಯದ ವಿವಿಧ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ಹಾಗೂ ಜನಪರ ಯೋಜನೆಗಳಿಗೆ ಅಗತ್ಯ ಅನುದಾನ ದೊರೆಯುತ್ತಿಲ್ಲ ಎಂಬ ಆತಂಕ ಜನರಲ್ಲಿ ಮೂಡಿದೆ. ಸರ್ಕಾರವು ಘೋಷಣೆಗಳಿಗೆ ಸೀಮಿತವಾಗದೆ, ಕಾರ್ಯರೂಪದಲ್ಲಿ ಜನರಿಗೆ ಅನುಕೂಲವಾಗುವಂತೆ ಯೋಜನೆಗಳನ್ನು ಜಾರಿಗೊಳಿಸಬೇಕು” ಎಂದರು.
ಮಾಜಿ ಮೇಯರ್ ಈರೇಶ ಅಂಚಟಗೇರಿ ಮಾತನಾಡಿ, “ರಾಜ್ಯದ ಆರ್ಥಿಕ ವ್ಯವಸ್ಥೆ ಸದೃಢವಾಗಿದ್ದಾಗ ಮಾತ್ರ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಲು ಸಾಧ್ಯ. ಸಾರ್ವಜನಿಕ ಹಣದ ಬಳಕೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಇರಬೇಕು. ಜನರಿಗೆ ನೀಡಿರುವ ಭರವಸೆಗಳನ್ನು ಆದ್ಯತೆಯ ಮೇರೆಗೆ ಈಡೇರಿಸಬೇಕು” ಎಂದು ಆಗ್ರಹಿಸಿದರು.
ನಿಂಗಪ್ಪ ಸುತಕಟ್ಟಿ ಮಾತನಾಡಿ, “ರಾಜ್ಯದ ಆರ್ಥಿಕ ನಿರ್ವಹಣೆ ಮತ್ತು ಜನರ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ಸರ್ಕಾರ ಗಂಭೀರವಾಗಿ ನಡೆದುಕೊಳ್ಳಬೇಕು. ರೈತರು, ಬಡವರು, ಮಧ್ಯಮ ವರ್ಗ ಹಾಗೂ ಸಾಮಾನ್ಯ ಜನರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳದಂತೆ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮಹೀಂದ್ರ ಕೌತಾಳ, ವಸಂತ ನಾಡಜೋಶಿ, ಬಸವರಾಜ ಗರಗ, ಮಂಜುನಾಥ ಮಲ್ಲಿಗವಾಡ, ಸಂಜಯ ಕಪಠಕರ, ರಾಜು ಕಾಳೆ, ವಿಜಯಾನಂದ ಶೆಟ್ಟಿ, ಶಕ್ತಿ ಹಿರೇಮಠ, ಅನುಪ ಬಿಜವಾಡ, ಶಂಕರ ಶೇಳಕೆ, ಮಂಜುನಾಥ ಕಾಠಕರ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
