ಶಿಕ್ಷಣ ಕ್ಷೇತ್ರದೊಂದಿಗೆ ನಿಕಟ ನಂಟು; ಶಿಕ್ಷಕರು, ವಿದ್ಯಾರ್ಥಿಗಳ ಮಾನಸಿಕ ಸ್ವಾಸ್ಥ್ಯಕ್ಕೆ ಅಪಾರ ಕೊಡುಗೆ
ಧಾರವಾಡ
ನಾಡಿನ ಖ್ಯಾತ ಮನೋವೈದ್ಯ, ಚಿಂತಕ ಹಾಗೂ ಮನೋವಿಜ್ಞಾನಿ ಡಾ. ಆನಂದ ಪಾಂಡುರಂಗಿ ಅವರ ನಿಧನಕ್ಕೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಧಾರವಾಡ ಜಿಲ್ಲಾ ಘಟಕದ ಪದಾಧಿಕಾರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿ, ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಡಾ. ಆನಂದ ಪಾಂಡುರಂಗಿ ಅವರು ಶಿಕ್ಷಣ ಕ್ಷೇತ್ರದ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ರಾಜ್ಯದ ವಿವಿಧೆಡೆ ಸಂಚರಿಸಿ ಮನೋರೋಗ ಚಿಕಿತ್ಸೆ ಹಾಗೂ ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಮಹತ್ವದ ಸೇವೆ ಸಲ್ಲಿಸಿದ್ದರು ಎಂದು ಸಂಘದ ಪದಾಧಿಕಾರಿಗಳು ಸ್ಮರಿಸಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಿದ್ದ ಅವರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಮನೋವಿಜ್ಞಾನ ಮತ್ತು ಮಾನಸಿಕ ಆರೋಗ್ಯದ ಕುರಿತು ಬೋಧನೆ, ಮಾರ್ಗದರ್ಶನ ನೀಡುತ್ತಿದ್ದರು. ಇಲಾಖೆಯ ತರಬೇತಿ, ಕಾರ್ಯಾಗಾರ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರ ನೀಡಿದ್ದರು.
ಡಾ. ಆನಂದ ಪಾಂಡುರಂಗಿ ಅವರು ಮನೋವಿಜ್ಞಾನ ಕ್ಷೇತ್ರದಲ್ಲಿ ಅಪರೂಪದ ಲೇಖಕರಾಗಿದ್ದು, ಉತ್ತಮ ವಾಗ್ಮಿಯಾಗಿಯೂ ಗುರುತಿಸಿಕೊಂಡಿದ್ದರು. ಅವರ ಜ್ಞಾನ, ಚಿಂತನೆ ಹಾಗೂ ಮಾರ್ಗದರ್ಶನದಿಂದ ಅನೇಕರು ಪ್ರಯೋಜನ ಪಡೆದಿದ್ದಾರೆ ಎಂದು ಸಂಘದ ಮುಖಂಡರು ತಿಳಿಸಿದ್ದಾರೆ.
74ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ಅವರು ನಿಧನರಾಗಿರುವುದು ನಾಡಿಗೆ, ವಿಶೇಷವಾಗಿ ಶಿಕ್ಷಣ ಹಾಗೂ ಮನೋವಿಜ್ಞಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ದಿವಂಗತ ಡಾ. ಆನಂದ ಪಾಂಡುರಂಗಿ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಧಾರವಾಡ ಜಿಲ್ಲಾ ಅಧ್ಯಕ್ಷ ವಿ.ಎಫ್. ಚುಳಕಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಿತಕುಮಾರ ಆರ್. ದೇಸಾಯಿ ಸೇರಿದಂತೆ ಜಿಲ್ಲಾ ಘಟಕದ ಎಲ್ಲ ಹಂತದ ಪದಾಧಿಕಾರಿಗಳು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
