ಧಾರವಾಡ
ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಅಂಗಸಂಸ್ಥೆಯಾದ ಧಾರವಾಡದ ಡಾ. ಬಿ.ಡಿ. ಜತ್ತಿ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸ್ನಾತಕೋತ್ತರ ಸಂಶೋಧನಾ ಕೇಂದ್ರದ ವತಿಯಿಂದ 2026ನೇ ಸಾಲಿನ ಪದವಿ ಪ್ರದಾನ ಸಮಾರಂಭ DBHP ಸಭಾ ಆವರಣದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಪ್ರಾಂಗಣದಲ್ಲಿ ಸಂಭ್ರಮದಿಂದ ಜರುಗಿತು.
ಈ ಸಮಾರಂಭದಲ್ಲಿ ಒಟ್ಟು 176 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಇದರಲ್ಲಿ 148 ವಿದ್ಯಾರ್ಥಿಗಳು ಸ್ನಾತಕ (Graduate) ಹಾಗೂ 28 ವಿದ್ಯಾರ್ಥಿಗಳು ಸ್ನಾತಕೋತ್ತರ (Post Graduate) ಪದವಿಗಳನ್ನು ಸ್ವೀಕರಿಸಿದರು.
ಇದಲ್ಲದೆ, ವಿಶ್ವವಿದ್ಯಾಲಯದ ರ್ಯಾಂಕ್ ಪಟ್ಟಿಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಒಟ್ಟು 20 ರ್ಯಾಂಕ್ಗಳನ್ನು ಗಳಿಸಿದ್ದು, ಸ್ನಾತಕ ವಿಭಾಗದ ವಿದ್ಯಾರ್ಥಿಗಳು 19 ರ್ಯಾಂಕ್ಗಳನ್ನು ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ಮಥುರಾ ಸಂಸ್ಕೃತ ವಿಶ್ವವಿದ್ಯಾಲಯ ಕುಲಪತಿ ಡಾ. ಮಹಾದೇವ ಬಿ. ಚೆಟ್ಟಿ ಸಮಾರಂಭ ಉದ್ಘಾಟಿಸಿ ಮಾತನಾಡಿ, ವೈದ್ಯಕೀಯ ಶಿಕ್ಷಣವು ಕೇವಲ ಪದವಿ ಪಡೆಯುವುದಕ್ಕೆ ಸೀಮಿತವಾಗದೆ, ಮಾನವೀಯ ಮೌಲ್ಯಗಳು, ಸೇವಾ ಮನೋಭಾವ ಮತ್ತು ಸಾಮಾಜಿಕ ಬದ್ಧತೆಯನ್ನು ಬೆಳೆಸುವಂತಿರಬೇಕು. ವೈದ್ಯರು ರೋಗಿಗಳ ನೋವು ಮತ್ತು ಸಂಕಷ್ಟಗಳನ್ನು ಅರ್ಥಮಾಡಿಕೊಂಡು ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸಬೇಕು. ವೈದ್ಯಕೀಯ ವೃತ್ತಿಯಲ್ಲಿ ನಿರಂತರ ಅಧ್ಯಯನ, ಸಂಶೋಧನೆ ಮತ್ತು ನೈತಿಕ ಮೌಲ್ಯಗಳಿಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಮುಖ್ಯ ಭಾಷಣಕಾರ ಬೆಳಗಾವಿ ಕೆಎಲ್ಇ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ನಿರ್ದೇಶಕ ಡಾ. ಎಂ.ಎ. ಉಡಚಣಕರ್ ಪದವಿ ಪಡೆದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ, ವೈದ್ಯಕೀಯ ಕ್ಷೇತ್ರದಲ್ಲಿ ನಿರಂತರ ಜ್ಞಾನಾರ್ಜನೆ, ವೃತ್ತಿಪರ ಕೌಶಲ್ಯ, ಶಿಸ್ತು ಮತ್ತು ರೋಗಿಗಳೊಂದಿಗಿನ ಉತ್ತಮ ಸಂಬಂಧ ಅತ್ಯಂತ ಮುಖ್ಯ. ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದಿಂದ ಪಡೆದ ಜ್ಞಾನವನ್ನು ಸಮಾಜದ ಆರೋಗ್ಯ ಸುಧಾರಣೆಗೆ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಕರ್ನಾಟಕದ ಕಾರ್ಯಾಧ್ಯಕ್ಷ ಈರೇಶ ಅಂಚಟಗೇರಿ ಮಾತನಾಡಿ, ಶಿಕ್ಷಣ ಸಂಸ್ಥೆಯ ಬೆಳವಣಿಗೆಯಲ್ಲಿ ಆಡಳಿತ ಮಂಡಳಿ, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಪೋಷಕರ ಪಾತ್ರ ಮಹತ್ವದ್ದಾಗಿದೆ. ವೈದ್ಯಕೀಯ ಪದವಿ ಪಡೆದ ವಿದ್ಯಾರ್ಥಿಗಳು ತಮ್ಮ ವೃತ್ತಿಯನ್ನು ಕೇವಲ ಉದ್ಯೋಗವನ್ನಾಗಿ ಪರಿಗಣಿಸದೆ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಸೇವೆ ತಲುಪಿಸುವ ಸಂಕಲ್ಪ ಮಾಡಬೇಕು. ವೈದ್ಯಕೀಯ ಕ್ಷೇತ್ರದಲ್ಲಿ ಜ್ಞಾನ ಮತ್ತು ಕೌಶಲ್ಯದ ಜೊತೆಗೆ ಮಾನವೀಯತೆ, ಕರುಣೆ ಹಾಗೂ ಸೇವಾ ಮನೋಭಾವವನ್ನು ಅಳವಡಿಸಿಕೊಳ್ಳಬೇಕು. ಈ ಸಂಸ್ಥೆಯು ಮುಂದಿನ ದಿನಗಳಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲಿ ಎಂದು ಹಾರೈಸಿದರು.
ಅಧ್ಯಕ್ಷತೆಯನ್ನು DBHP ಸಭಾ ಧಾರವಾಡದ ಅಧ್ಯಕ್ಷ ರಾಘವೇಂದ್ರ ತವನಪ್ಪನವರ ವಹಿಸಿದ್ದರು. ಆಡಳಿತ ಮಂಡಳಿಯ ಸದಸ್ಯರಾದ ಜಿ.ಜಿ. ಹಿರೇಮಠ, ಬಸವರಾಜ ತಾಳಿಕೋಟಿ, ಯಕ್ಕುಂಡಿಮಠ, ಉಮಾ ಚವ್ಹಾಣ, ನಾರಾಯಣ ಮೊರೆ, ಅಶೋಕ ಶೆಟ್ಟರ, ಕಾಲೇಜಿನ ಪ್ರಾಂಶುಪಾಲ ಡಾ. ಆನಂದ್ ಹೊಸೂರ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಪದವಿ ಪಡೆದ ವಿದ್ಯಾರ್ಥಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಮತ್ತು ವಿಶ್ವವಿದ್ಯಾಲಯದ ರ್ಯಾಂಕ್ಗಳ ಮೂಲಕ ಸಂಸ್ಥೆಯು ಮತ್ತೊಮ್ಮೆ ತನ್ನ ಶೈಕ್ಷಣಿಕ ಗುಣಮಟ್ಟವನ್ನು ಸಾಬೀತುಪಡಿಸಿದ್ದು, ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಗಣ್ಯರು ಶುಭ ಹಾರೈಸಿದರು.

