215 ಪೌರಕಾರ್ಮಿಕರ ನೇಮಕಾತಿ ಅಧಿಸೂಚನೆಯ ಲೋಪದೋಷ ಸರಿಪಡಿಸಿ ಪರಿಷ್ಕೃತ ಅಧಿಸೂಚನೆ ಹೊರಡಿಸಿ: ಮಾಜಿ ಮಹಾಪೌರ ಈರೇಶ ಅಂಚಟಗೇರಿ ಆಗ್ರಹ

ಹಂಚಿಕೊಳ್ಳಿ

ಹುಬ್ಬಳ್ಳಿ
ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯಲ್ಲಿ 215 ಪೌರಕಾರ್ಮಿಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನವೆಂಬರ್ 2, 2026ರಂದು ಪ್ರಕಟಿಸಿರುವ ಅಧಿಸೂಚನೆಯಲ್ಲಿ ಹಲವು ಲೋಪದೋಷಗಳಿದ್ದು, ಅವುಗಳನ್ನು ತಕ್ಷಣ ಸರಿಪಡಿಸಿ ಪರಿಷ್ಕೃತ ನೇಮಕಾತಿ ಅಧಿಸೂಚನೆ ಹೊರಡಿಸಬೇಕೆಂದು ಮಾಜಿ ಮಹಾಪೌರ ಈರೇಶ ಅಂಚಟಗೇರಿ ಆಗ್ರಹಿಸಿದ್ದಾರೆ.

ಈ ಕುರಿತು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿರುವ ಅವರು, ಸರ್ವ ಸಮಾಜದ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ನಡೆಯುತ್ತಿರುವ ಈ ನೇಮಕಾತಿ ಪ್ರಕ್ರಿಯೆಯಲ್ಲಿ ಎಲ್ಲ ಅರ್ಹ ಅಭ್ಯರ್ಥಿಗಳಿಗೂ ಸಮಾನ ಅವಕಾಶ ದೊರೆಯಬೇಕು. ನೇಮಕಾತಿ ಸಂಪೂರ್ಣ ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ನಡೆಯಬೇಕು ಎಂದು ತಿಳಿಸಿದ್ದಾರೆ.

ಪ್ರಸ್ತುತ ಅಧಿಸೂಚನೆಯಲ್ಲಿ ಎರಡು ವರ್ಷಗಳ ಅನುಭವ ಕಡ್ಡಾಯಗೊಳಿಸಿರುವುದು ಇದೇ ಮೊದಲ ಬಾರಿಗೆ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ನಿರುದ್ಯೋಗಿ ಹಾಗೂ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗುವ ಸಾಧ್ಯತೆಯಿದೆ. ಆದ್ದರಿಂದ ಈ ಷರತ್ತನ್ನು ಮರುಪರಿಶೀಲಿಸಿ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ಅದೇ ರೀತಿ, ಅಧಿಸೂಚನೆಯಲ್ಲಿ ಕನಿಷ್ಠ ವಿದ್ಯಾರ್ಹತೆಯನ್ನು ಸ್ಪಷ್ಟವಾಗಿ ನಮೂದಿಸಿಲ್ಲ. ಕನಿಷ್ಠ 7ನೇ ತರಗತಿ ಉತ್ತೀರ್ಣರಾಗಿರುವುದನ್ನು ವಿದ್ಯಾರ್ಹತೆಯ ಮಾನದಂಡವಾಗಿ ಪರಿಗಣಿಸಿ ಸ್ಪಷ್ಟಪಡಿಸಬೇಕು. ಪ್ರಕಟಿತ ಮೀಸಲಾತಿ ರೋಸ್ಟರ್ ಪಟ್ಟಿಯನ್ನು ಸರ್ಕಾರದ ಮೀಸಲಾತಿ ನಿಯಮಗಳು ಹಾಗೂ ರೋಸ್ಟರ್ ಬಿಂದುಗಳಿಗೆ ಅನುಗುಣವಾಗಿ ಮರುಪರಿಶೀಲಿಸಿ ಅಗತ್ಯ ತಿದ್ದುಪಡಿ ಮಾಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಅಭ್ಯರ್ಥಿಗಳ ವಯೋಮಿತಿಯನ್ನು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷಗಳಿಗೆ ನಿಗದಿಪಡಿಸಬೇಕು. ಪ್ರಸ್ತುತ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿದು, ಎಲ್ಲಾ ಲೋಪದೋಷಗಳನ್ನು ಸರಿಪಡಿಸಿದ ನಂತರ ಪರಿಷ್ಕೃತ ಅಧಿಸೂಚನೆ ಪ್ರಕಟಿಸಬೇಕು. ಹೊಸ ಅಧಿಸೂಚನೆ ಹೊರಡಿಸಿದ ಬಳಿಕ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಸೂಕ್ತ ಕಾಲಾವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.


ಹಂಚಿಕೊಳ್ಳಿ

Leave a Reply

Your email address will not be published. Required fields are marked *