ಧಾರವಾಡ
ಗಾಂಧಿನಗರದ ಶ್ರೀ ಈಶ್ವರ ದೇವಸ್ಥಾನದಲ್ಲಿ ಧಾರವಾಡ ದಸರಾ ಜಂಬೂಸವಾರಿ ಉತ್ಸವ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಭಾನುವಾರ ಚಾಲನೆ ನೀಡಲಾಯಿತು.
ಡಿಸಿಪಿ ಶ್ರುತಿ ಎಂ.ಎನ್. ಮಾತನಾಡಿ, ಭಾರತೀಯ ಸಂಸ್ಕೃತಿ ನಮ್ಮ ಅಮೂಲ್ಯ ಪರಂಪರೆಯಾಗಿದ್ದು, ಅದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ನಮ್ಮ ಸಂಸ್ಕೃತಿ, ಸಂಪ್ರದಾಯ ಹಾಗೂ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದರ ಜೊತೆಗೆ ಮಕ್ಕಳಲ್ಲಿಯೂ ಅವುಗಳ ಬಗ್ಗೆ ಅರಿವು ಮೂಡಿಸಬೇಕು. ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸುವ ಮೂಲಕ ನಮ್ಮ ಪರಂಪರೆಯನ್ನು ಉಳಿಸಬೇಕು ಎಂದು ಹೇಳಿದರು.
ಎಸಿಪಿ ಪ್ರಶಾಂತ್ ಸಿದ್ದನಗೌಡ ಮಾತನಾಡಿ, ಮಹಿಳೆಯರು ಧಾರಾವಾಹಿಗಳನ್ನು ನೋಡುವುದರಲ್ಲಿಯೇ ಹೆಚ್ಚಿನ ಸಮಯ ಕಳೆಯದೆ, ಇಂತಹ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ನಮ್ಮ ಹಿರಿಯರು ಪಾಲಿಸಿಕೊಂಡು ಬಂದ ಸಂಪ್ರದಾಯಗಳನ್ನು ಮುಂದುವರಿಸಿಕೊಂಡು ಹೋಗಬೇಕು. ಮಕ್ಕಳು ಹಾಗೂ ಮಹಿಳೆಯರು ಮೊಬೈಲ್ ಬಳಕೆಯನ್ನು ಮಿತಿಗೊಳಿಸಿ, ಅಗತ್ಯ ಮತ್ತು ಉತ್ತಮ ಕಾರ್ಯಗಳಿಗೆ ಮಾತ್ರ ಬಳಸಬೇಕು. ಮೊಬೈಲ್ ಹಾಗೂ ಆನ್‌ಲೈನ್ ವಂಚನೆಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಜನಜಾಗೃತಿ ಮೂಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಗುರುರಾಜ್ ಹುಣಸಿಮರದ ಮಾತನಾಡಿ, ಧಾರವಾಡ ದಸರಾ ಜಂಬೂಸವಾರಿ ಉತ್ಸವಕ್ಕೆ ಸಾರ್ವಜನಿಕರು ಹಾಗೂ ಗಣ್ಯರು ನೀಡುತ್ತಿರುವ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ಇದೇ ಅಕ್ಟೋಬರ್ 20ರ ಮಂಗಳವಾರದಂದು ಆನೆಯೊಂದಿಗೆ ಜಂಬೂಸವಾರಿ ಮೆರವಣಿಗೆ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

