ಹುಬ್ಬಳ್ಳಿ
ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಅವರು ಇತ್ತೀಚೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಡಾ. ಲಿಂಗರಾಜ ಅಂಗಡಿ ಅವರು ಕರ್ನಾಟಕ ವಿಶ್ವವಿದ್ಯಾಲಯ ಸಿಂಡಿಕೇಟ್, ಸಿನೇಟ್ ಹಾಗೂ ಅಕ್ಯಾಡೆಮಿಕ ಕೌನ್ಸಿಲ್ ಸದಸ್ಯರಾಗಿ ಆಯ್ಕೆಯಾದವರು. ಅದೇ ರೀತಿ ಕರ್ನಾಟಕ ವಿಶ್ವವಿದ್ಯಾಲಯ ಕಾಲೇಜು ಶಿಕ್ಷಕರ ಸಂಘದ ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಹಾಗೂ ಕಾಲೇಜು ಶಿಕ್ಷಕರ ಸಂಘದ ಒಕ್ಕೂಟದ ಅಧ್ಯಕ್ಷರಾಗಿ ಕೆಲಸ ಮಾಡಿದ ಅವರ ನಮ್ಮ ಪಕ್ಷದ ಸಿದ್ಧಾಂತ ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆ ಆಗಿದ್ದು ತುಂಬಾ ಖುಷಿ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಧಾರವಾಡ ಜಿಲ್ಲಾ ಮಹಾನಗರ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸದಾನಂದ ಡಂಗನವರ ಹಾಗೂ ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ಚಂದ್ರಶೇಖರ ಜುಟ್ಟಲ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಹರ್ಷ ವ್ಯಕ್ತಪಡಿಸಿ ಡಾ . ಲಿಂಗರಾಜ ಅಂಗಡಿ ಅವರನ್ನು ಅಭಿನಂದಿಸಿ ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ವಿಧಾನ ಪರಿಷತ್ ಸದಸ್ಯರಾದ ಎಫ್.ಎಚ್. ಜಕ್ಕಪ್ಪನವರ, ಶಾಸಕ ಎನ್.ಎಚ್. ಕೋನರೆಡ್ಡಿ, ಮಾಜಿ ಸಂಸದ ಪ್ರೊ. ಐ.ಜಿ. ಸನದಿ ಹಾಗೂ ಧಾರವಾಡ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.

