ಪ್ಲಾಸ್ಟಿಕ್‌ಗೆ ಗುಡ್‌ಬೈ ಹೇಳಿ, ಬಟ್ಟೆ ಚೀಲಕ್ಕೆ ಜೈ ಎನ್ನಿ!

ಹಂಚಿಕೊಳ್ಳಿ

ವೀರೇಂದ್ರ ಹೆಗ್ಗಡೆ ಜನ್ಮದಿನದ ಪ್ರಯುಕ್ತ ಜೆಎಸ್‌ಎಸ್ ವಿದ್ಯಾರ್ಥಿಗಳಿಂದ ಪರಿಸರ ಜಾಗೃತಿ ಅಭಿಯಾನ; 200ಕ್ಕೂ ಹೆಚ್ಚು ಬಟ್ಟೆ ಚೀಲ ವಿತರಣೆ

ಧಾರವಾಡ
ಪರಿಸರ ಸಂರಕ್ಷಣೆ ಎನ್ನುವುದು ಕೇವಲ ಭಾಷಣ, ಘೋಷಣೆಗಳಿಗೆ ಸೀಮಿತವಾಗದೆ ಪ್ರತಿಯೊಬ್ಬರ ಬದುಕಿನ ನಿತ್ಯದ ಅಭ್ಯಾಸವಾಗಬೇಕು. ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ, ಪರಿಸರಸ್ನೇಹಿ ಪರ್ಯಾಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಸ್ವಚ್ಛ ಹಾಗೂ ಸುಂದರ ಪರಿಸರ ನಿರ್ಮಾಣ ಸಾಧ್ಯ ಎಂಬ ಸಂದೇಶದೊಂದಿಗೆ ಧಾರವಾಡದ ಜೆಎಸ್‌ಎಸ್ ವಿದ್ಯಾರ್ಥಿಗಳು ಅರ್ಥಪೂರ್ಣ ಜಾಗೃತಿ ಅಭಿಯಾನ ನಡೆಸಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನದ ಪ್ರಯುಕ್ತ ಜೆಎಸ್‌ಎಸ್ ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಮಹಾವಿದ್ಯಾಲಯದ ಇಂಗ್ಲಿಷ್ ವಿಭಾಗ ಹಾಗೂ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ಈ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮಾಲಿನ್ಯ ಹೆಚ್ಚುವುದಲ್ಲದೆ, ಪ್ರಾಣಿ-ಪಕ್ಷಿಗಳ ಜೀವಕ್ಕೂ ಅಪಾಯ ಎದುರಾಗುತ್ತಿದೆ. ಪ್ಲಾಸ್ಟಿಕ್ ತ್ಯಾಜ್ಯ ಮಣ್ಣಿನ ಫಲವತ್ತತೆ ಹಾಗೂ ಪರಿಸರ ಸಮತೋಲನದ ಮೇಲೂ ದುಷ್ಪರಿಣಾಮ ಬೀರುತ್ತಿದೆ. ಇಂತಹ ಸಂದರ್ಭದಲ್ಲಿ ದಿನನಿತ್ಯದ ಮಾರುಕಟ್ಟೆ ವ್ಯವಹಾರಗಳಲ್ಲಿ ಪ್ಲಾಸ್ಟಿಕ್ ಚೀಲಗಳ ಬದಲಿಗೆ ಮರುಬಳಕೆ ಮಾಡಬಹುದಾದ ಬಟ್ಟೆ ಚೀಲಗಳನ್ನು ಬಳಸುವಂತೆ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಕಾಲೇಜಿನ ಪ್ರಾಧ್ಯಾಪಕರು ಹಾಗೂ ನೂರಾರು ವಿದ್ಯಾರ್ಥಿಗಳು ಧಾರವಾಡದ ವಿದ್ಯಾಗಿರಿ, ಗಾಂಧಿನಗರ, ಶೆಟ್ಟರ್ ಕಾಲೋನಿ ಸೇರಿದಂತೆ ವಿವಿಧ ಪ್ರದೇಶಗಳಿಗೆ ತೆರಳಿ ಅಂಗಡಿ ಮಾಲೀಕರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರನ್ನು ಭೇಟಿಯಾಗಿ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳನ್ನು ವಿವರಿಸಿದರು. ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಮನವಿ ಮಾಡಿ, ಸುಮಾರು 200ಕ್ಕೂ ಹೆಚ್ಚು ಬಟ್ಟೆ ಚೀಲಗಳನ್ನು ವಿತರಿಸಿದರು.

ಕೇವಲ ಒಂದು ಚೀಲದ ಬದಲಾವಣೆ, ಪರಿಸರಕ್ಕೆ ದೊಡ್ಡ ಕೊಡುಗೆ!
ನಾವು ದಿನನಿತ್ಯ ಬಳಸುವ ಒಂದು ಪ್ಲಾಸ್ಟಿಕ್ ಚೀಲದ ಬದಲಿಗೆ ಬಟ್ಟೆ ಚೀಲವನ್ನು ಆಯ್ಕೆ ಮಾಡಿಕೊಳ್ಳುವುದು ಸಣ್ಣ ಬದಲಾವಣೆಯಂತೆ ಕಾಣಬಹುದು. ಆದರೆ ಸಾವಿರಾರು ಜನರು ಇಂತಹ ಬದಲಾವಣೆಗೆ ಮುಂದಾದರೆ ಪ್ಲಾಸ್ಟಿಕ್ ತ್ಯಾಜ್ಯವನ್ನು ಗಣನೀಯವಾಗಿ ತಗ್ಗಿಸಬಹುದು. ಪರಿಸರ ಸಂರಕ್ಷಣೆಯ ಜವಾಬ್ದಾರಿ ಸರ್ಕಾರ ಅಥವಾ ಸಂಘ-ಸಂಸ್ಥೆಗಳದ್ದಷ್ಟೇ ಅಲ್ಲ, ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು ಎಂಬ ಸಂದೇಶವನ್ನು ಈ ಅಭಿಯಾನ ಸಾರಿತು.

ಡಾ. ವೀರೇಂದ್ರ ಹೆಗ್ಗಡೆಯವರ ಜನ್ಮದಿನವನ್ನು ಕೇವಲ ಸಂಭ್ರಮಕ್ಕೆ ಸೀಮಿತಗೊಳಿಸದೆ, ಸಮಾಜಮುಖಿ ಹಾಗೂ ಪರಿಸರಪೂರಕ ಕಾರ್ಯದ ಮೂಲಕ ಅರ್ಥಪೂರ್ಣವಾಗಿ ಆಚರಿಸಿದ ಜೆಎಸ್‌ಎಸ್ ಕಾಲೇಜಿನ ಈ ಪ್ರಯತ್ನ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು. ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ಪರಿಸರ ಕಾಳಜಿಯನ್ನು ಬೆಳೆಸುವ ಇಂತಹ ಕಾರ್ಯಗಳು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗೆ ಪ್ರೇರಣೆಯಾಗಲಿವೆ.

ಜೆಎಸ್‌ಎಸ್ ಕಾರ್ಯದರ್ಶಿ ಡಾ. ಅಜಿತ ಪ್ರಸಾದ, ಆಡಳಿತಾಧಿಕಾರಿ ಅರಿಂಹತ ಪ್ರಸಾದ, ಮಹಾವಿದ್ಯಾಲಯದ ಪ್ರಾಚಾರ್ಯ ವೆಂಕಟೇಶ ಮುತಾಲಿಕ ಮಾರ್ಗದರ್ಶನದಲ್ಲಿ ನಡೆದ ಈ ಜಾಗೃತಿಯಲ್ಲಿ ಆವಂತಿಕಾ ರೊಟ್ಟಿ, ಪ್ರವೀಣ ಕೊರಳಹಳ್ಳಿ, ಡಾ. ಶಿಲ್ಪಾ ಆಢೂರ ಸೇರಿದಂತೆ ಅನೇಕ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.


ಹಂಚಿಕೊಳ್ಳಿ

Leave a Reply

Your email address will not be published. Required fields are marked *